ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ. ವೈಯಕ್ತಿಕವಾಗಿ ಇದು ನನ್ನ ಅಭಿಪ್ರಾಯವಾಗಿದ್ದು, ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಹತ್ತು ದಿನಗಳ ಅವಧಿಯಲ್ಲಿ 15,000 ಕ್ಯುಸೆಕ್ಸ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು 2016ರ ಸೆಪ್ಟೆಂಬರ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದಾಗ ಉದ್ಭವವಾದ ಬಿಕ್ಕಟ್ಟಿನ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ನಾನು ನಿಮ್ಮ ಮನೆಗೆ ಬಂದು ಕೈಹಿಡಿದು ಕರೆದುಕೊಂಡು ಬಂದು ಸರ್ವಪಕ್ಷಗಳ ಸಭೆ ನಡೆಸಿದ್ದು ನಿಮಗೆ ನೆನಪಿರಬಹುದೆಂದು ಭಾವಿಸಿದ್ದೇನೆ.

ಹಿಂದೆಲ್ಲ ರಾಜ್ಯದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ಒಬ್ಬ ಮುತ್ಸದ್ದಿಯಾಗಿ ಇದಕ್ಕಿಂತಲೂ ಮುಖ್ಯವಾಗಿ ಒಬ್ಬ ಹೆಮ್ಮೆಯ ಕನ್ನಡಿಗನಾಗಿ ರಾಜ್ಯಕ್ಕೆ ನ್ಯಾಯ ಕೊಡಲು ನೀವು ಹೋರಾಟ ನಡೆಸಿದ್ದನ್ನು ರಾಜ್ಯದ ಜನರು ಗಮನಿಸಿದ್ದಾರೆ. ಆದರೆ ಇತ್ತೀಚೆಗೆ ನೀವು ಮತ್ತು ನಿಮ್ಮ ಪಕ್ಷ ಕೇಂದ್ರ ಸರ್ಕಾರದ ವಕ್ತಾರರಂತೆ ಪಕ್ಷಪಾತಿಯಾಗಿ ವರ್ತಿಸುತ್ತಿರುವುದನ್ನು ಕೂಡಾ ನನ್ನನ್ನೂ ಸೇರಿದಂತೆ ಏಳುಕೋಟಿ ಕನ್ನಡಿಗರು ಗಮನಿಸುತ್ತಿದ್ದಾರೆ. ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ಗೌಡರು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ? ಎಂದು ಜನ ಪ್ರಶ್ನಿಸುತ್ತಿದ್ದಾರೆ ಎಂದಿದ್ದಾರೆ. ನೀರಾವರಿ ವಿಚಾರದಲ್ಲಿ ನ್ಯಾಯಪಕ್ಷಪಾತಿಯಾಗಿ ಕರ್ನಾಟಕದ ಹಿತಾಸಕ್ತಿಯ ರಕ್ಷಣೆ ಮಾಡಬೇಕಾಗಿದ್ದ ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಸತತವಾಗಿ ಕನ್ನಡಿಗರ ಹಿತವನ್ನು ಬಲಿಗೊಡಲು ಹೊರಟಿರುವುದನ್ನು ದೇವೇಗೌಡರಿಗೆ ನಾನು ಬಿಡಿಸಿ ಹೇಳಬೇಕಾಗಿಲ್ಲ ಎಂದು ತಿಳಿದುಕೊಂಡಿದ್ದೇನೆ.

ಮಹದಾಯಿ ಜಲಾನಯನ ಪ್ರದೇಶದ ಕಳಸಾ ನಾಲೆ ಯೋಜನೆಯ ರೂ.995.30 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿಗೆ 2023ರ ಮಾರ್ಚ್ ನಲ್ಲಿಯೇ ಅನುಮೋದನೆ ನೀಡಲಾಗಿದೆ. ಈ ಯೋಜನೆಗೆ ಅಗತ್ಯವಿರುವ ಭೂಮಿಯಲ್ಲಿ 26,925 ಹೆಕ್ಟೇರ್ ಅರಣ್ಯಪ್ರದೇಶದ ಸ್ವಾಧೀನ ಪ್ರಕ್ರಿಯೆ ಗೋವಾ ರಾಜ್ಯದ ಆಕ್ಷೇಪದ ಕಾರಣದಿಂದಾಗಿ ಕುಂಟುತ್ತಾ ಸಾಗಿದೆ. ಪ್ರಸ್ತುತ ಈ ಪ್ರಕ್ರಿಯೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಮತ್ತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪರಿಶೀಲನೆಯಲ್ಲಿದೆ. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರ ಅನುಮೋದನೆ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟೀಕರಣ ನೀಡಿರುವ ಕಾರಣ ಶೀಘ್ರವಾಗಿ ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕಾಗಿದೆ. ಬಂಡೂರಿ ನಾಲೆ ತಿರುವು ಯೋಜನೆಗೆ ಅಗತ್ಯವಿರುವ 28 ಹೆಕ್ಟೇರ್ ಅರಣ್ಯ ಪ್ರದೇಶದ ಸ್ವಾಧೀನಕ್ಕಾಗಿ 2024ರ ಆಗಸ್ಟ್ ನಲ್ಲಿಯೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬೇಡಿಕೆಗೆ ಸಂಬAಧಿಸಿದ ಇತರ ಪ್ರಕ್ರಿಯೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣಗೊಳಿಸಲಾಗಿದ್ದು ಈ ನದಿ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವುದಷ್ಟೇ ಬಾಕಿ ಉಳಿದಿದೆ.

ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಕರ್ನಾಟಕಕ್ಕೆ 173 ಟಿಎಂಸಿ ನೀರಿನ ಪಾಲನ್ನು ನೀಡಿ 2010ರಲ್ಲಿಯೇ ಐತೀರ್ಪು ನೀಡಿದೆ. ಈ ನೀರಿನ ಪಾಲಿನಲ್ಲಿ 130 ಟಿಎಂಸಿಯನ್ನು ಬಳಸಿಕೊಂಡು ಉತ್ತರ ಕರ್ನಾಟಕದ ಏಳು ಜಿಲ್ಲೆಗಳಿಗೆ ನೀರುಣಿಸುವ ರೂ.51,148 ಸಾವಿರ ವೆಚ್ಚದ ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸಿದ್ಧವಾಗಿದೆ. ಆದರೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಯಲ್ಲಿರುವ ಪ್ರತಿವಾದಿ ರಾಜ್ಯಗಳ ಆಕ್ಷೇಪಣಾ ಅರ್ಜಿಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ ನ್ಯಾಯಮಂಡಳಿಯ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಲು ನಿರಾಕರಿಸುತ್ತಾ ಬಂದಿದೆ. ಈ ಯೋಜನೆಯ ಅನಿವಾರ್ಯತೆಯನ್ನು ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟು ಶೀಘ್ರವಾಗಿ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಿದರೆ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕೆಂಬ ಪ್ರಸ್ತಾವವನ್ನು ಸಲ್ಲಿಸಲು ಅನುಕೂಲವಾಗುತ್ತದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದರೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆಯ ಬರಪೀಡಿತ ಪ್ರದೇಶಗಳಿಗೆ ವರದಾನವಾಗಲಿದೆ. ಈ ಘೋಷಣೆಯ ಪ್ರಸ್ತಾವಕ್ಕೆ ಸಾರ್ವಜನಿಕ ಹೂಡಿಕೆ ಸಮಿತಿ ಈಗಾಗಲೇ ಅಂಗೀಕಾರ ನೀಡಿದೆ. ಆದರೆ ಕೇಂದ್ರ ಸರ್ಕಾರ ಮೀನಮೇಷ ಎಣಿಸುತ್ತಾ ಕೂತಿದೆ ಎಂದು ಕಿಡಿಕಾರಿದ್ದಾರೆ.

Ads in Post

Author:

...
Nanje Gowda SS

Administrator

I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.

No Reviews